ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿಯಿಂದ ಪಾಲ್ಗೊಳ್ಳಿ
ಶಾಸಕ ಮಹಾಂತೇಶ ಕೌಜಲಗಿ ಕರೆ: ಬೆಳಗಾವಿ ವಿಭಾಗ ಮಟ್ಟದ ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳ, ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಬೈಲಹೊಂಗಲ 19: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಸಾಧನೆಯ ಪಥದತ್ತ ಸಾಗಬೇಕೆಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಪಟ್ಟಣದ ಕೆಆರ್ಸಿಎಸ್ ಕಾಲೇಜು ಮಹಾವಿದ್ಯಾಲಯದ ಆವರಣದಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 2022-23 ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳ ಹಾಗೂ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ, ಚಾಲನೆ ನೀಡಿ ಮಾತನಾಡಿದ ಅವರು ಆಟಗಳಲ್ಲಿ ಸೋಲು ಗೆಲವು ಮುಖ್ಯವಲ್ಲ, ವಿದ್ಯಾರ್ಥಿಗಳು ಪಾಲ್ಗೊಳ್ಳುವದು ಅತ್ಯವಶ್ಯವಾಗಿದ್ದು ಪಾಲಕರ, ವಸತಿ ಶಾಲೆಗಳ ಕೀರ್ತಿ ತರಬೇಕೆಂದರು.
ಸಭೆಯ ಅಧ್ಯಕ್ಷತೆ ವಹಿಸಿದ ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಮಾತನಾಡಿ, ಸರಕಾರ ಬಡ ಮಕ್ಕಳ ಶ್ರೇಯೋಭಿವೃದ್ದಿಗಾಗಿ ರಾಜ್ಯದ ವಸತಿ ಶಾಲೆಗಳಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ಆಟ-ಪಾಠಗಳಲ್ಲಿ ಗುರಿ ಸಾಧಿಸಿ ಭವ್ಯ ಭಾರತ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು.
ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಲಕ್ಷ್ಮಣ ಬಬಲಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಸವರಾಜ ಕುರಿಹುಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ, ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಗಂಗರೆಡ್ಡಿ, ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ಕರಿಸಿರಿ, ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಸಿ.ಬಿ.ಯಮನೂರ, ಯಲ್ಲಮ್ಮನಗುಡ್ಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮಹಾದೇವ ಹುಲಗೆಜ್ಜಿ, ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಎಂ.ವಿ.ಕುಂಬಾರ, ಮುಂತಾದವರು ವೇದಿಕೆ ಮೇಲಿದ್ದರು. ಬೆಳಗಾವಿ ವಿಭಾಗ ಮಟ್ಟದ ವಸತಿ ಶಾಲೆಗಳ ಪ್ರಾಂಶುಪಾಲರು, ಶಿಕ್ಷಕ ಸಿಬ್ಬಂದಿ, ಕ್ರೀಡಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಕ್ಕುಂದದ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಐ.ಎಸ್.ಮುನವಳ್ಳಿ ಸ್ವಾಗತಿಸಿದರು. ಕಾಕತಿಯ ಅಂಬೇಡ್ಕರ ವಸತಿ ಶಾಲೆಯ ಪ್ರಾಂಶುಪಾಲ ಉಮೇಶ ಸುಭೇದಾರ ನಿರೂಪಿಸಿದರು. ಜಾಂಬೋಟಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಸಿ.ವಾಯ್.ಮರೆಮ್ಮಗೋಳ ವಂದಿಸಿದರು.
ಕ್ರೀಡಾ ಜ್ಯೋತಿಯನ್ನು ಬರ ಮಾಡಿಕೊಳ್ಳಲಾಯಿತು. ಈ ಮೊದಲು ವಿವಿಧ ಕ್ರೀಡಾಕೂಟಗಳಲ್ಲಿ ಬಾಗವಹಿಸಿ ವಿಜೇತರಾದ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಾಸಕ ಮಹಾಂತೇಶ ಕೌಜಲಗಿ ಹಾಗೂ ಜಂಟಿ ನಿರ್ದೇಶಕಿ ಡಾ. ಉಮಾ ಸಾಲಿಗೌಡರ ಅವರು ಪ್ರಶಸ್ತಿ ಪತ್ರ ಹಾಗೂ ಫಲಕಗಳನ್ನು ವಿತರಿಸಿದರು.