ಬಿ. ನಾಗೇಂದ್ರ ರಾಜೀನಾಮೆ ನೀಡದಿದ್ದರೆ ತಾಲೂಕು, ಹೋಬಳಿ ಮಟ್ಟದಲ್ಲಿ ಪ್ರತಿಭಟನೆ: ಸುಭಾಷ ಪಾಟೀಲ ಎಚ್ಚರಿಕೆ
ಬೆಳಗಾವಿ 19: ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ವತಿಯಿಂದ ನಡೆಯುತ್ತಿರುವ ಮೂರನೇ ದಿನದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿಗಳಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಮಾಜಿ ಶಾಸಕ ಅರವಿಂದ ಪಾಟೀಲ ಮಾತನಾಡಿ, ಸಚಿವ ನಾಗೇಂದ್ರ ಅವರ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರದ ಧೋರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ, ಗೀತಾ ಸುತಾರ, ಎಂ.ಬಿ. ಜಿರಲಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.