ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಶಹರ ಘಟಕದ ಪದಾಧಿಕಾರಿಗಳ ಪದಗ್ರಹಣ
ಗದಗ 21: ಸಂಘಟನೆಗಳು ನೌಕರರ ನೋವು-ನಲಿವುಗಳಿಗೆ ಸ್ಪಂದಿಸಬೇಕು. ಶಿಕ್ಷಕರಿಗೆ ಬೋಧನೆಗಿಂತ ಬೋಧಕೇತರ ಕೆಲಸಗಳ ಹೊರೆ ಹೆಚ್ಚಾಗುತ್ತಿರುವುದರಿಂದ ಮಾನಸಿಕ ಒತ್ತಡ ಉಂಟಾಗುತ್ತಿದೆ. ಆದ್ದರಿಂದ ಶಿಕ್ಷಕರನ್ನು ಬೋಧಕೇತರ ಕಾರ್ಯಗಳಿಂದ ಮುಕ್ತಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಹಾಗೂ ಹಿರಿಯ ರಾಜ್ಯ ಉಪಾಧ್ಯಕ್ಷ ಡಾ. ರವಿ ಎಲ್. ಗುಂಜಿಕರ ಅಧಿಕಾರಿಗಳಿಗೆ ಮನವಿ ಮಾಡಿದರು.
ಅವರು ನಗರದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 10ರಲ್ಲಿ ಜರುಗಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಶಹರ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ‘ಗುರು ಸ್ಪಂದನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರು ಮಾತನಾಡಿ, ಶಿಕ್ಷಕರ ನೋವು-ನಲಿವು, ಕುಂದು-ಕೊರತೆ ಹಾಗೂ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ವ್ಯವಸ್ಥೆ ರೂಪಿಸಿರುವುದು ಶ್ಲಾಘನೀಯ. ನೂತನ ಪದಾಧಿಕಾರಿಗಳು ಶಿಕ್ಷಕರ ಹಿತಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶುಭ ಹಾರೈಸಿದರು.