ಯುವ ಸಂಘಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಿ: ತಹಶೀಲ್ದಾರ್ ಜೂಗಲ್ ಮಂಜುನಾಯಕ
ಕಂಪ್ಲಿ, ಆ.13: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಂಡು, ಯುವಕರ ನೋಂದಣಿ ಕಾರ್ಯವನ್ನು ಚುರುಕುಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಕುರಿತು ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಮುದಾಯದ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು 16ರಿಂದ 35 ವರ್ಷದೊಳಗಿನ ಯುವಕರನ್ನು ಒಳಗೊಂಡ ಯುವ ಸಂಘಗಳನ್ನು ರಚಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯುವ ಸಂಘಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಂಡು ಸಂಘಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು.
ತಾಪಂ ಇಒ ಆರ್.ಕೆ. ಶ್ರೀಕುಮಾರ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಕಂಪ್ಲಿ ತಾಲೂಕಿನಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಬೇಕಾಗಿದೆ. ಸ್ಥಳೀಯ ಸಮುದಾಯದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಯುವಕರನ್ನು ನೇರ ಪಾಲುದಾರರನ್ನಾಗಿಸುವುದು ಇದರ ಉದ್ದೇಶವಾಗಿದೆ. ಕ್ರೀಡೆ, ಫಿಟ್ನೆಸ್ ಹಾಗೂ ಕೌಶಲ್ಯಾಭಿವೃದ್ಧಿ ಮೂಲಕ ಯುವಜನರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ವಿವಿಧ ಇಲಾಖೆಗಳ ಟಿಎಂ ಬಸವರಾಜ, ಕೆ. ವಿರೂಪಾಕ್ಷಪ್ಪ, ಗಾದಿಲಿಂಗಪ್ಪ, ಮಲ್ಲಪ್ಪ, ಮಹಾಬಲೇಶ್ವರ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.