ಹೊಸಪೇಟೆಯಲ್ಲಿ ತಾಲೂಕುಮಟ್ಟದ ಉಚಿತ ಆರೋಗ್ಯ ಮೇಳ
ಹೊಸಪೇಟೆ(ವಿಜಯನಗರ)30: ವಿಜಯನಗರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ತಾಲೂಕುಮಟ್ಟದ ಉಚಿತ ಆರೋಗ್ಯ ಮೇಳ ಹೊಸಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರ ಜರುಗಿತು.
ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಭಾರತ ದೇಶದ ಯಾವುದೇ ಪ್ರಜೆಯು ದುಡ್ಡಿಲ್ಲದೆ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಪ್ರಧಾನಿ ಮೋದಿಯವರು ಅಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದ್ದು, ಆಯುಷ್ಮಾನ್ ಕಾರ್ಡ್ ಹೊಂದಿರುವಂತವರಿಗೆ ರೂ.5ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ಎರಡ್ಮೂರು ವರ್ಷಗಳಿಂದ ನಿಂತಿದ್ದ ಯಶಸ್ವಿನಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೇ ಜಾರಿಗೆ ತಂದಿದ್ದು, ಇದಕ್ಕಾಗಿ ರೂ.300 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ ಎಂದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2022-23ನೇ ಸಾಲಿನಲ್ಲಿ ಮಹಿಳೆಯರಿಗೆ ಹಾಗೂ ಯುವತಿಯರಿಗಾಗಿ 300 ಸ್ವಸ್ಥ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.
ಡಯಾಲಿಸಿಸ್ ಗಾಗಿ ರೂ.20 ಕೋಟಿ ಹಣವನ್ನು ಮಿಸಲಿಡಲಾಗಿದೆ.ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಋತುಚಕ್ರ ಬಂದಾಗ ನೈರ್ಮಲ್ಯ, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಕ್ಕಾಗಿ 19 ಲಕ್ಷ ಸ್ಯಾನಿಟರಿ ಪ್ಯಾಡ್ ಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಪೆಬ್ರುವರಿ ತಿಂಗಳಲ್ಲಿ ರೂ. 230 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಅದರಲ್ಲಿ ಜಿಲ್ಲಾ ಅಸ್ಪತ್ರೆ ಕಾಮಗಾರಿಯೂ ಇದೆ ಎಂದು ವಿವರಿಸಿದ ಅವರು 10 ಕೋಟಿ ರೂ.ವೆಚ್ಚದಲ್ಲಿ ತಾಲೂಕು ಸರ್ಕಾರಿ ಅಸ್ಪತ್ರೆಯನ್ನು 100 ಹಾಸಿಗೆಗಳಿಂದ 250ಕ್ಕೆ ಮೇಲ್ದರ್ಜೇಗೇರಿಸಲಾಗುವುದು ಎಂದರು.
ನೂತನ ವಿಜಯನಗರ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮವಹಿಸಿ ದುಡಿಯುವುದಾಗಿ ಅವರು ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ನಗರಸಭೆಯ ಅಧ್ಯಕ್ಷೆ ಸುಂಕಮ್ಮ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ನಗರಸಭೆ ಸ್ಥಾಯಿ ಸಮಿತಿ ಸದಸ್ಯ ಜಂಬುನಾಥ್, ಹುಡಾ ಅಧ್ಯಕ್ಷ ಅಶೋಕ ಜೀರೆ, ಸಹಾಯ ಆಯುಕ್ತ ಸಿದ್ಧರಾಮೇಶ್ವರ, ಡಿ.ಎಚ್.ಒ ಸಲೀಂ, ತಹಶಿಲ್ದಾರ್ ವಿಶ್ವಜಿತ ಮೆಹತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅನುಷ್ಠಾನ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.
-----------