ಶಿಕ್ಷಕರ ಸಂಘದ ಪದಗ್ರಹಣ, ವಾರ್ಷಿಕ ಮಹಾಸಭೆ
ಲೋಕದರ್ಶನ ವರದಿ
ಹೊಸಪೇಟೆ 30: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ವಿಜಯನಗರ ಜಿಲ್ಲಾ ಘಟಕದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ವಾರ್ಷಿಕ ಮಹಾಸಭೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಶಿಕ್ಷಕರ ಹಲವು ಬೇಡಿಕೆಗಳು ಈಡೇರಿದ್ದು, ಉಳಿದ ಬೇಡಿಕೆಗಳ ಪರಿಹಾರಕ್ಕೆ ಸರ್ಕಾರದೊಂದಿಗೆ ನಿರಂತರ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯಗುರು ಹುದ್ದೆ ಹಾಗೂ ಪ್ರೌಢಶಾಲೆಗಳಿಗೆ ಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
300ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಕಂಪ್ಯೂಟರ್ ಆಪರೇಟರ್ ಹಾಗೂ ಡಿ-ಗ್ರೂಪ್ ಸಿಬ್ಬಂದಿ ನೇಮಕಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲು ಬದ್ಧರಾಗಬೇಕು ಎಂದು ಕರೆ ನೀಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚೇತನ್ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಜಿಲ್ಲಾಧ್ಯಕ್ಷ ಬಿ.ಬಿ. ಶಿವಾನಂದ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ಪರಿಹಾರ ಹಾಗೂ ಆನ್ಲೈನ್ ಆಡಳಿತಾತ್ಮಕ ಒತ್ತಡ ಕಡಿಮೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಉಮಾಪತಿ, ರಾಜ್ಯ ಉಪಾಧ್ಯಕ್ಷೆ ಪದ್ಮಲತಾ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.