ಕೊಲ್ಹಾರದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ
ಕೊಲ್ಹಾರ 06 : ಶಿಕ್ಷಕರ ಸೇವೆ ಸಮಾಜಕ್ಕೆ ದಾರೀದೀಪವಾಗಿದ್ದು, ಅವರು ನೀಡುವ ಜ್ಞಾನ, ಸಂಸ್ಕಾರ ಹಾಗೂ ಮೌಲ್ಯಗಳು ಸದಾ ಜೀವಂತವಾಗಿರುತ್ತವೆ ಎಂದು ಶಾಸಕ ಶಿವಾನಂದ ಎಸ್. ಪಾಟೀಲ ಹೇಳಿದರು. ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಆಡಳಿತ ಹಾಗೂ ಬಸವನ ಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಅಖಂಡ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಕರು ವೃತ್ತಿಯ ಘನತೆ ಮತ್ತು ಜವಾಬ್ದಾರಿ ಅರಿತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು.
ಪಠ್ಯ ಬೋಧನೆಯ ಜತೆಗೆ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸಂಸ್ಕಾರ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಬೇಕು ಎಂದು ಹೇಳಿದರು. ಬಸವನ ಬಾಗೇವಾಡಿ ವಿರಕ್ತ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಮೌಲ್ಯಗಳ ಬೀಜ ಬಿತ್ತುವ ಶಿಕ್ಷಕರ ಸೇವೆ ಪ್ರಾತಃಸ್ಮರಣೀಯ ಎಂದರು. ಕೊಲ್ಹಾರ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಸಾನ್ನಿಧ್ಯ ವಹಿಸಿದ್ದರು. ತಹಸೀಲ್ದಾರ್ ವೈ.ಎಸ್. ಸೋಮನಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಾ ಕಲಬುರ್ಗಿ ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.