ಶಿಕ್ಷಕರು ದೇಶದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಕಾಶಪ್ಪನವರ

ಶಿಕ್ಷಕರು ದೇಶದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಕಾಶಪ್ಪನವರ  Teachers are the architects who build the nation's future: Kashappanavar


ಬಾಗಲಕೋಟೆ 06: ಶಿಕ್ಷಕರು ಸಮಾಜದ ಭವಿಷ್ಯ ರೂಪಿಸುವ ಪ್ರಮುಖ ಶಕ್ತಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು. ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 60 ಶಾಲೆಗಳನ್ನು ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸಿಎಸ್‌ಆರ್ ಅನುದಾನದಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಶಿಕ್ಷಕರು ಪಠ್ಯ ಬೋಧನೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ನಡತೆ, ಸಾಮಾಜಿಕ ಜವಾಬ್ದಾರಿ, ದೇಶಪ್ರೇಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದರು. ಸಂಸದ ಗದ್ದಿಗೌಡರ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡುವಂತೆ ಹೇಳಿದರು.

ವಿಧಾನ ಪರಿಷತ್ ಶಾಸಕ ಪಿ.ಎಚ್‌.ಪೂಜಾರ ಶಿಕ್ಷಕರ ಪರಿಶ್ರಮ ಮತ್ತು ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 38 ಶಿಕ್ಷಕರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕರನ್ನು ಗೌರವಿಸುವ ಜೊತೆಗೆ, ಜಿಲ್ಲಾ ಪಂಚಾಯತ ಸಿಇಒ ಅವರ ಆಶಯದಂತೆ ನೀಡಲಾದ ಎಲೆಮರೆ ಕಾಯಿ ಪ್ರಶಸ್ತಿಗೆ ಆಯ್ಕೆಯಾದ 6 ಶಿಕ್ಷಕರಿಗೂ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮೇಶ ಮೇಟಿ ವಹಿಸಿದ್ದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,  ಜಿ.ಪಂ ಸಿಇಒ ಗಜಾನನ ಬಾಲೆ ಸೇರಿದಂತೆ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.