ಶಿಕ್ಷಕರು ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖವಾದದ್ದು: ಪಾಟೀಲ
ಸಿಂದಗಿ 05: ಶಿಕ್ಷಕರು ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸಾಮಾಜಿಕ ಚಿಂತನೆ, ಕಳಕಳಿ ಹೊಂದಿರುವವರೇ ಉತ್ತಮ ಶಿಕ್ಷಕರು. ಸದೃಢ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅತೀ ಮಹತ್ವವಾದದ್ದು ಎಂದು ಕರ್ನಾಟಕ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಹೇಳಿದರು.
ರವಿವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನೋತ್ಸವ ಸಮಿತಿಯಿಂದ ಹಮ್ಮಿಕೊಂಡ ಶಿಕ್ಷಕರ ದಿನೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಶಿಕ್ಷಕರು ಕೇವಲ ಪುಸ್ತಕದಲ್ಲಿನ ಪಾಠವನ್ನು ಮಾತ್ರ ಹೇಳುವುದಿಲ್ಲ. ತಮ್ಮ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ಬೆಂಬಲವನ್ನು ನೀಡುತ್ತಾರೆ. ವಿದ್ಯಾರ್ಥಿಗಳು ತಪ್ಪು ಮಾಡಿದರೆ ಅದನ್ನು ಸೂಕ್ಷ್ಮವಾಗಿ ತಿದ್ದುತ್ತಾರೆ. ವಿದ್ಯಾರ್ಥಿಗಳಲ್ಲಿ ದೇಶದ ಉತ್ತಮ ಪ್ರಜೆ ಆಗಲು ಆತ್ಮ ವಿಶ್ವಾಸವನ್ನು ತುಂಬುತ್ತಾರೆ. ಜೀವನದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವುದನ್ನು ಕಲಿಸುವವರು ಶಿಕ್ಷಕರು. ಅಂತಹ ಉತ್ತಮ ಶಿಕ್ಷಕರನ್ನು ನಾವೆಲ್ಲರೂ ಪಡೆದಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ, ಕೋವಿಡ್-19ನಿಂದ ಅಗಲಿದ ಶಿಕ್ಷಕರ ಕುಟುಂಭ ಸದಸ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಹಶೀಲ್ದಾರ ನಿಂಗಪ್ಪ ಬಿರಾದಾರ, ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್. ನಿರಲಗಿ, ಕ್ಷೇತ್ರಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಸ್.ಎಸ್. ಕತ್ನಳ್ಳಿ, ಎಪಿಎಂಸಿ ನೂತನ ಅಧ್ಯಕ್ಷ ಸಿದ್ದಣ್ಣ ಹಿರೇಕುರಬರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಆನಂದ ಭೂಸನೂರ, ನೌಕರ ಸಂಘದ ಅಧ್ಯಕ್ಷರಾದ ಅಶೋಕ ತೆಲ್ಲೂರ, ರವಿ ಬಿರಾದಾರ, ನೋಡಲ್ ಅಧಿಕಾರಿ ಎ.ಎಂ. ಮಾಡಗಿ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು. ಶಿಕ್ಷಕರು, ಶಿಕ್ಷಣ ಲಾಖೆಯ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.