ಆಗಸ್ಟ್ 20ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ
ಬ್ಯಾಡಗಿ 14 : ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ತಿಳಿಸಿದರು.
ಗುರುವಾರ ಪಟ್ಟಣದ ತಹಶೀಲ್ದಾರ್ರ ಸಭಾಂಗಣದಲ್ಲಿ ನಡೆದ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನ ಪ್ರತಿಯೊಬ್ಬ ಅಧಿಕಾರಿಯೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆಗಸ್ಟ್ 20ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ನೋಟಿಸ್ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಅಂದು ನಡೆಯುವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಚುನಾಯಿತ ಪ್ರತಿನಿಧಿಗಳು, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಎಸ್.ಎಸ್. ಬಳ್ಳಾರಿ ಮನವಿ ಮಾಡಿದರು.
ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾದ ರಮೇಶ್ ಸುತ್ತಕೋಟಿ, ಸುರೇಶ್ ಹುಳಬುತ್ತಿ, ರಮೇಶ್ ಕೋಟಿ, ನಿಂಗಪ್ಪ ಹೆಗ್ಗಣ್ಣನವರ, ಚಂದ್ರಶೇಖರ ಗದಗಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.