ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು
ಬಳ್ಳಾರಿ 30: ಬಳ್ಳಾರಿ ನಗರದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸಾರಿಗೆ ಸಚಿವರು, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಹಾಗೂ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಬುಧವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ, ಬಾಲಕಿಯರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಬರೆಯುವುದರಲ್ಲಿ ತಲ್ಲೀನರಾಗಿದ್ದ ವಿದ್ಯಾರ್ಥಿಗಳಿಗೆ ಮಾತನಾಡಿಸಿದ ಸಚಿವ ಶ್ರೀರಾಮುಲು ಅವರು ಪರೀಕ್ಷೆಯ ಕುರಿತು ಯಾವುದೇ ರೀತಿಯ ಒತ್ತಡಕ್ಕೆ ಹಾಗೂ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಎದುರಿಸಿ ಮತ್ತು ಫಲಿತಾಂಶ ಮತ್ತು ಶೇಕಡವಾರು ರಿಸಲ್ಟ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದರು.
ಪರೀಕ್ಷೆಯನ್ನು ಹಬ್ಬದಂತೆ ಎಂಜಾಯ್ ಮಾಡಿ;ಯಾವುದೇ ಕಾರಣಕ್ಕೂ ಭಯಪಡಬೇಡಿ ಎಂದರು. ಸುಸೂತ್ರ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಪರೀಕ್ಷಾ ಕೇಂದ್ರದಿಂದ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಜಿಲ್ಲೆಯಲ್ಲಿ 337 ಪ್ರೌಢಶಾಲೆಯ 23734 ವಿದ್ಯಾರ್ಥಿಗಳು 67 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 07 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಿದ್ದು, 1301 ಕೊಠಡಿಗಳನ್ನು ಪರೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು.
ಯಾವುದೇ ರೀತಿಯಲ್ಲಿ ಒತ್ತಡ ಮತ್ತು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತಿಳಿಸಿರುವೆ ಎಂದರು.
ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಸ್ವತಃ ಭೇಟಿ ಅವರ ಅಹವಾಲುಗಳನ್ನು ಮತ್ತು ಬೇಡಿಕೆಗಳನ್ನು ಆಲಿಸಿದ್ದೇನೆ. ಇಲಾಖೆಯ ಅಧಿಕಾರಿಗಳೊಂದಿಗೆ ನಾಳೆ ಮತ್ತು ನಾಡಿದ್ದು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಗಡಗಿ ಚನ್ನಪ್ಪ ವೃತ್ತಕ್ಕೆ ತನ್ನದೇ ಆದ ಇತಿಹಾಸ ಇದ್ದು, ವೃತ್ತದ ಸೌಂದರ್ಯೀಕರಣಕ್ಕೆ ಅದ್ಯತೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಮಾಜಿ ಸಂಸದೆ ಜೆ.ಶಾಂತಾ, ಡಿಡಿಪಿಐ ರಾಮಪ್ಪ ಮತ್ತಿತರರು ಇದ್ದರು.