ಕೇಂದ್ರ ಸರ್ಕಾರ ಜನ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ : ಲಮಾಣಿ
ರಾಣೇಬೆನ್ನೂರು 26: ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆಂದು ಹೇಳಿದ್ದ ನರೇಂದ್ರ ಮೋದಿ ಸರ್ಕಾರ ಜನ ವಿರೋಧಿ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಜಿಲ್ಲಾ ರೈತ ಯುವ ಘಟಕದ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಎಸ್ ಲಮಾಣಿ ಗಂಭೀರವಾಗಿ ಆರೋಪಿಸಿದ್ದಾರೆ.
ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಈಗ ಗೊಬ್ಬರ, ಓಷಧ, ಬೀಜಗಳ ಬೆಲೆ ದುಪ್ಪಟ್ಟಾಗಿದ್ದು, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತಿಗೆ ತಪ್ಪಿದೆ. ಮಾತಿನ ಮೂಲಕ ಜನರನ್ನು ಮರಳು ಮಾಡಿದ್ದ ನರೇಂದ್ರ ಮೋದಿ ಸರ್ಕಾರ ಬಣ್ಣ ಬಯಲಾಗಿದೆ.
ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಪೆಟ್ರೋಲ್, ಡಿಸೇಲ್ ಬೆಲೆ ವಿಪರೀತ ಹೆಚ್ಚಿದೆ. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ-ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಈಗಾಗಲೇ ಬಿಜೆಪಿ ಪಕ್ಷದ ನಾಯಕರುಗಳು, ಆಡಳಿತದ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೃಷ್ಣಮೂರ್ತಿ ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.