ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಉದ್ದೇಶ : ಸಚಿವ ರುದ್ರ್ಪ ಲಮಾಣಿ
ಲೋಕದರ್ಶನ ವರದಿ
ಹಾವೇರಿ, ಸೆ.5: ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನೆ ಬಾಗಿಲಿಗೆ ತಲುಪಬೇಕು ಎಂಬ ಉದ್ದೇಶದಿಂದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಸಂದೇಶದೊಂದಿಗೆ ಪ್ರಜಾಸೇವಾ ಆಂದೋಲನ ರೂಪಿಸಲಾಗಿದೆ. ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ನೇರ ಸಂಪರ್ಕ ಕಲ್ಪಿಸುವ ವೇದಿಕೆಯಾಗಿ ಈ ಆಂದೋಲನ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು. ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ಶನಿವಾರ ನಡೆದ ‘ಪ್ರಜಾಸೇವೆ ನಿಮ್ಮದು, ಪರಿಹಾರ ನಮ್ಮದು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರ ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಪರಿಹರಿಸಲು ಸಾಧ್ಯವಾಗದಿದ್ದರೂ, ತಾಲೂಕು, ಉಪವಿಭಾಗ ಹಾಗೂ ಜಿಲ್ಲಾಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು. ಕಾಲಾವಕಾಶ ಅಗತ್ಯವಿರುವ ಅರ್ಜಿಗಳಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ಕಲ್ಪಿಸಿ ಅರ್ಜಿದಾರರಿಗೆ ಸೂಕ್ತ ಹಿಂಬರಹ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಪ್ರಸ್ತುತ ಪ್ರಜಾಸೇವಾ ಸಭೆಗಳು ತಾಲೂಕು ಮಟ್ಟದಲ್ಲಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.