ಗಾಂಧಿ ಜೀ-ಶಾಸ್ತ್ರಿ ಜೀ ತತ್ವಗಳು ಸರ್ವಕಾಲಿಕ: ಜೆಟಿಪಿ
ಲೋಕದರ್ಶನ ವರದಿ
ಬೀಳಗಿ 02 : ಮಹಾತ್ಮ ಗಾಂಧಿ ಜೀ ವರ್ಣಭೇದ ನೀತಿ ಮತ್ತು ಅಸ್ಪೃಶ್ಯತೆಯ ವಿರುದ್ಧ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ ನಾಯಕ. ಗಾಂಧೀಜಿಯವರಿಗೆ 'ರಾಷ್ಟ್ರಪಿತ' ಎಂಬ ಅಭಿದಾನವನ್ನು ನೀಡಿದ್ದು ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ. ಪಾಟೀಲ ಅಭಿಪ್ರಾಯಪಟ್ಟರು.
ಇಲ್ಲಿಯ ಮಿನಿ ವಿಧಾನ ಸೌಧ ಆವರಣದಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಪಪಂ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಎಂಬುದು ಸ್ವೇಚ್ಛಾಚಾರವಾಗಬಾರದು. ಗಾಂಧೀಜಿಯವರು ಯಾವ ಉನ್ನತ ಆಶಯಗಳಿಗಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರೋ, ಆ ತತ್ವಗಳನ್ನು ನಾವು ಪಾಲಿಸಬೇಕು.
ಇತ್ತೀಚಿನ ದಿನಗಳಲ್ಲಿ ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನು ಜಾತಿಯ ಕಣ್ಣಿನಿಂದ ನೋಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಜಯಂತಿ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಆಗ ಮಾತ್ರ ನೈಜ ಇತಿಹಾಸ ಮುಂದಿನ ಪೀಳಿಗೆಗೆ ತಲುಪಲು ಸಾಧ್ಯ ಎಂದರು.