ಕನ್ನಡ ಉಳಿಸುವ ವಿವೇಕ ಕನ್ನಡಿಗರದ್ದಾಗಿರಬೇಕು: ನಾಗಭೂಷಣ ಬಗ್ಗನಡು
ಹಾವೇರಿ 07: ಕನ್ನಡ ರಾಜ್ಯೋತ್ಸವ ಕೇವಲ ಸಂಭ್ರಮಾಚರಣೆಗೆ ಸೀಮಿತವಾಗಬಾರದು. ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ವಿವೇಕ ಮತ್ತು ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರದ್ದಾಗಿರಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ನಾಗಭೂಷಣ ಬಗ್ಗನಡು ಹೇಳಿದರು.
ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಸಾಹಿತ್ಯ ವೇದಿಕೆಯ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಕನ್ನಡ ಭಾಷೆಯು ಅನ್ಯಭಾಷೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಿ, ಅವುಗಳ ಪ್ರಭಾವವನ್ನು ಜೀರ್ಣಿಸಿಕೊಂಡು ಸಮೃದ್ಧವಾಗಿ ಬೆಳೆಯುತ್ತಿರುವ ಭಾಷೆಯಾಗಿದೆ. '
ಸಂಸ್ಕೃತ ಭಾಷೆಯೊಂದಿಗೆ ಕೊಡು-ಕೊಳ್ಳುವಿಕೆಯ ಸಂಬಂಧವನ್ನು ಹೊಂದಿರುವ ಕನ್ನಡ ತನ್ನದೇ ಆದ ವೈಶಿಷ್ಟ್ಯ ಮತ್ತು ಅಸ್ಮಿತೆಯನ್ನು ಉಳಿಸಿಕೊಂಡಿದೆ. ಜ್ಞಾನಿಗಳು, ದಾರ್ಶನಿಕರು, ಶರಣರು, ಸಂತಕವಿಗಳು, ದಾಸರು, ಸಾಹಿತಿಗಳು, ಕವಿಗಳು ಹಾಗೂ ಕಲಾವಿದರ ಕೊಡುಗೆಯಿಂದ ಕನ್ನಡ ನಾಡು ಪುಣ್ಯಭೂಮಿಯಾಗಿ ರೂಪುಗೊಂಡಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪದವಿ ಪ್ರಾಚಾರ್ಯ ಡಾ. ಸಿದ್ಧೇಶ್ ಎಂ. ಬಿ. ಮಾತನಾಡಿ, ಕನ್ನಡವೆಂದರೆ ಕೇವಲ ಮಾತನಾಡುವ ಅಥವಾ ಸಂವಹನ ನಡೆಸುವ ಭಾಷೆಯಲ್ಲ; ಅದು ನಮ್ಮ ಬದುಕನ್ನು ಕಟ್ಟಿಕೊಳ್ಳುವ, ನಮ್ಮ ಸಂಸ್ಕೃತಿ ಮತ್ತು ಅಸ್ಮಿತೆಯನ್ನು ಪ್ರತಿಬಿಂಬಿಸುವ ಜೀವಂತ ಭಾಷೆಯಾಗಿದೆ. ಅನ್ಯಭಾಷೆಗಳನ್ನು ಗೌರವಿಸುವುದರ ಜೊತೆಗೆ ಕನ್ನಡದ ಅಸ್ತಿತ್ವ, ಅಸ್ಮಿತೆ ಮತ್ತು ವೈಭವವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂಜೀವ ಆರ್. ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ರಾಜ್ಯೋತ್ಸವವು ಕನ್ನಡಿಗರ ಸ್ವಾಭಿಮಾನ, ಏಕತೆ ಮತ್ತು ಹೋರಾಟದ ಸಂಕೇತವಾಗಿ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ಅವುಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಪ್ರಾಧ್ಯಾಪಕ ಡಾ. ಎಂ. ಎಂ. ಹೊಳ್ಳಿಯವರ ಮಾತನಾಡಿ, ಈ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಶಮಂತಕುಮಾರ ಕೆ. ಎಸ್. ಅತಿಥಿಗಳನ್ನು ಪರಿಚಯಿಸಿದರು. ಮಣಿಕಂಠ ಗೋದಮನಿ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ಪ್ರೊ. ಶಂಭನಗೌಡ ನೀರಲಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರೊ. ಶ್ರೀದೇವಿ ದೊಡ್ಡಮನಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.