ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೈಲ್ ಸಮರ್ಪಕ ದಾಸ್ತಾನು ಇದೆ;
ಲೋಕದರ್ಶನ ವರದಿ
ಸಾರ್ವಜನಿಕರು ಸಂಯಮದಿಂದ ವರ್ತಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮನವಿ
ಧಾರವಾಡ: ಧಾರವಾಡ ಜಿಲ್ಲೆಯ ವಿವಿಧ ಪೆಟ್ರೋಲ್ ಬಂಕ್ಗಳಲ್ಲಿ ಅಸಾಮಾನ್ಯ ಗದ್ದಲ ಕಂಡು ಬರುತ್ತಿದ್ದು, ನಾಗರೀಕರು ಪೆಟ್ರೋಲ್ ಮತ್ತು ಡಿಸೈಲ್ನ್ನು ಆತಂಕದಿಂದ ಹೆಚ್ಚಾಗಿ ಖರೀದಿಸುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡಿಸೈಲ್ ಕೊರತೆ ಇಲ್ಲ. ಸಾರ್ವಜನಿಕರು ವದಂತಿಗಳಿಗೆ ಗಮನ ಕೊಡಬಾರದು. ಎಲ್ಲ ಪೆಟ್ರೋಲ್ ಬಂಕ್ಗಳು ದಿನನಿತ್ಯದಂತೆ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅಗತ್ಯವಿರುವಷ್ಟು ಪೆಟ್ರೋಲ್, ಡಿಸೈಲ್ ಮಾರಾಟ ಮಾಡುತ್ತಿದ್ದಾರೆ. ಯಾರೂ ಅನಗತ್ಯವಾಗಿ ಇಂಧನ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಬಾರದು. ಅಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತವು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡಿಸೈಲ್ನ ಕೊರತೆ ಇರುವುದಿಲ್ಲ. ಮತ್ತು ಸಮರ್ಕ ಪ್ರಮಾಣದಲ್ಲಿ ಪೆಟ್ರೋಲ್, ಡಿಸೈಲ್ ಲಭ್ಯವಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆದ್ದರಿಂದ ನಾಗರೀಕರು ಅನಾವಶ್ಯಕವಾಗಿ ಆತಂಕದಿಂದ ಇಂಧನ ಸಂಗ್ರಹ ಮಾಡಬಾರದು. ಇಂತಹ ವರ್ತನೆಗಳು ಸರಬರಾಜು ವ್ಯವಸ್ಥೆಯನ್ನು ಅಸ್ತವ್ಯಸ್ಥ ಗೊಳಿಸಬಹುದು. ಆದ್ದರಿಂದ ಸಾರ್ವಜನಿಕರು ಸಂಯಮ ದಿಂದ ವರ್ತಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಇನ್ನು ಮುಂದೆ, ಪೆಟ್ರೋಲಿಯಂ ಕಾಯಿದೆ 1934 ಹಾಗೂ ಪೆಟ್ರೋಲಿಯಂ ನಿಯಮಗಳು 2002 ಪ್ರಕಾರ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪೆಟ್ರೋಲ್ ಮಾರಾಟ ಮಾಡುವುದು ಸಂಪೂರ್ಣ ನಿಷೇಧಿತವಾಗಿದೆ. ಏಕೆಂದರೆ ಇದು ಗಂಭೀರ ಸುರಕ್ಷತಾ ಆಪಾಯವನ್ನು ಉಂಟುಮಾಡುತ್ತದೆ. ಆದ್ದರಿಂದ ಧಾರವಾಡ ಜಿಲ್ಲೆಯಲ್ಲಿನ ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರು ಪ್ಲಾಸ್ಟಿಕ ಬಾಟಲಿಗಳಲ್ಲಿ ಪೆಟ್ರೋಲ್ ಮಾರಾಟ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ, ಸಂಬಂಧಿಸಿದವರ ಮೇಲೆ ಅಧಿಕಾರಿಗಳಿಂದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ನಾಗರೀಕರು ಪೆಟ್ರೋಲ್ ಬಂಕ್ಗಳಲ್ಲಿ ಶಿಸ್ತಿನಿಂದ ನಡೆದುಕೊಳ್ಳಬೇಕು ಹಾಗೂ ಪಂಪ್ ಸಿಬ್ಬಂದಿ ಮತ್ತು ಇತರೇ ನಾಗರೀಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಮಾಜದಲ್ಲಿ ಶಾಂತಿ ಮತ್ತು ವ್ಯವಸ್ಥೆಯನ್ನು ಕಾಪಾಡಲು ಎಲ್ಲರ ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.