ಭೋವಿ ನಿಗಮದ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಳಂಬ ತೋರುವಂತಿಲ್ಲ
ಬಳ್ಳಾರಿ 19 : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯದ ಫಲಾನುಭವಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳು ಮತ್ತು ಯೋಜನೆಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ತೋರುವಂತಿಲ್ಲ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಅವರು ಹೇಳಿದರು.
ನಗರದ ಜಿಪಂ ನ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದೆ. ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಯೋಜನೆಗಳು ಹಾಗೂ ಇತರ ಸಹಾಯಧನಗಳು ಸಕಾಲದಲ್ಲಿ ದೊರೆಯುವಂತಾಗಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಅಥವಾ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಮಾ, ಕೇಂದ್ರ ಕಚೇರಿಯ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ,
ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಉಪ ಅಧೀಕ್ಷಕ ರಘು, ಬಳ್ಳಾರಿ ನಗರ ಡಿವೈಎಸ್ಪಿ ಗೋವಿಂದರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಭೋವಿ ಸಮುದಾಯದ ಜನಪ್ರತಿನಿಧಿಗಳು ಹಾಗೂ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.