ರಾಷ್ಟ್ರೀಯ

ಆಂಧ್ರಪ್ರದೇಶದಲ್ಲಿ ಬೈಕ್ ಮೇಲೆ ಲಾರಿ ಹರಿದು ಇಬ್ಬರು ಯುವಕರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಆಂಧ್ರಪ್ರದೇಶದಲ್ಲಿ ಬೈಕ್ ಮೇಲೆ ಲಾರಿ ಹರಿದು ಇಬ್ಬರು ಯುವಕರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಬಾಪಟ್ಲಾ, ನ.13 : ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಮಾರ್ಟೂರು ಮಂಡಲದ ಇಸುಕದರ್ಶಿ ಗ್ರಾಮದ ಬಳಿ ಚೆನ್ನೈ–ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ವೇಗವಾಗಿ ಬಂದ ಲಾರಿಯೊಂದು ಬೈಕ್ ಮೇಲೆ ಹರಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಮೂವರು ಯುವಕರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೈಕ್‌ನಲ್ಲಿ ಒಂಗೋಲೆಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮಂದಾ ಸಲ್ಮಾನ್ (20) ಮತ್ತು ಶ್ರೀರಾಮ್ ಪೆಟೂರು (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡ ನೆಹೆಮಿಯಾ ಎಂಬ ಯುವಕನನ್ನು ಆರಂಭದಲ್ಲಿ ಬಾಪಟ್ಲಾದ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತನ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಪಘಾತ ಸಂಭವಿಸಿದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಾರ್ಟೂರು ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ಮಾರ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಓದಿ