ವಿಜಯಪುರ 14: ದೈಹಿಕ ಶಿಕ್ಷಣ ವಿಭಾಗವು ವಿವಿಧ ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಮೂಲಕ, ಆ ಕ್ರೀಡೆಗಳಲ್ಲಿ ಬದಲಾಗುತ್ತಿರುವ ನಿಯಮಗಳು ಮತ್ತು ನವೀನ ಕೌಶಲ್ಯಗಳ ಕುರಿತು ಮಾಹಿತಿಯನ್ನು ನೀಡುತ್ತಿರುವುದು ಪ್ರಶಂಸನೀಯ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯದ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಥ್ಲೇಟಿಕ್ಸ ಕ್ರೀಡೆಯ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಕಾರ್ಯಾಗಾರಗಳು ತರಬೇತಿ ಪಡೆಯುವ ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮುಖ್ಯ ಸಹಾಯವಾಗುತ್ತಿದೆ ಎಂದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮುರುಗೇಶನ್ ದೊಡ್ಡಬಳ್ಳಾಪುರ, ಮುಖ್ಯ ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಮ್.ಚಂದ್ರಶೇಖರ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ, ದೈಹಿಕ ಶಿಕ್ಷಣ ವಿಭಾಗದ ಎಲ್ಲಾ ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂಧಿಗಳು, ಸಂಯೋಜಿತ ಮಹಿಳಾ ಮಹಾವಿದ್ಯಾಲಯಗಳ ದೈಹಿಕ ಶಿಕ್ಷಣ ನಿರ್ದೇಶಕರು, ಬಂಜಾರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಬಿ.ಪಿ.ಇಡಿ./ಎಂ.ಪಿ.ಇಡಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಸ್ವಾಗತಿಸಿದರು ಹಾಗೂ ಪ್ರೊ.ಜ್ಯೋತಿ ಉಪಾದ್ಯೆ ವಂದಿಸಿದರು.