ಕೂಡಗಿ ಬಳಿ ಹೈಟೆನ್ಷನ್ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ಕೊಲ್ಹಾರ 11: ತಾಲೂಕಿನ ಕೂಡಗಿ ಎನ್ಟಿಪಿಸಿ ಶಾಖೋತ್ಪನ್ನ ವಿದ್ಯುತ್ ಘಟಕದ ಸಮೀಪವಿರುವ ಬೃಹತ್ ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹೈಟೆನ್ಷನ್ ವಿದ್ಯುತ್ ಗೋಪುರಕ್ಕೆ ವ್ಯಕ್ತಿಯ ಶವ ತಂಗಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಯಿಂದ ಶವ ತೆರವು: ಘಟನಾ ಸ್ಥಳಕ್ಕೆ ಧಾವಿಸಿದ ಬಸವನಬಾಗೇವಾಡಿ ಅಗ್ನಿಶಾಮಕ ದಳದ ಸಿಬ್ಬಂದಿ, ತೀವ್ರ ಸಾಹಸ ನಡೆಸಿ ವಿದ್ಯುತ್ ಕಂಬದಿಂದ ಶವವನ್ನು ಕೆಳಗೆ ಇಳಿಸಿದರು. ಸ್ಥಳಕ್ಕೆ ಕೂಡಗಿ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ತಳವಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಮೃತನ ಹೆಸರು, ಊರು ಹಾಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.