ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ನಿಗದಿಪಡಿಸಿದ ಅನುದಾನ ಸಮರ್ಕವಾಗಿ ಬಳಸಿ, ಗುರಿ ಸಾಧಿಸಿ
ವಿಜಯಪುರ 17: ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ನಿಗದಿಪಡಿಸಿರುವ ಅನುದಾನವನ್ನು ಸಮರ್ಕವಾಗಿ ಬಳಸಿಕೊಂಡು, ನಿಗದಿತ ಅವಧಿಯಲ್ಲಿ ಗುರಿ ಸಾಧಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ 2026-27ನೇ ಸಾಲಿನ ಪರಿಶಿಷ್ಟ ಜಾತಿ ಉಪಹಂಚಿಕೆ ಹಾಗೂ ಗಿರಿಜನ ಉಪಯೋಜನೆಯಡಿ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಅನುಷ್ಠಾನ ಮತ್ತು ಅಕ್ಟೋಬರ್ 2026ರ ಅಂತ್ಯದವರೆಗಿನ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿ ನಿಗದಿಪಡಿಸಿರುವ ಯೋಜನೆಗಳ ಕುರಿತು ಆಯಾ ಇಲಾಖೆಗಳ ಅಧಿಕಾರಿಗಳು ಸಮಗ್ರ ಮಾಹಿತಿ ಪಡೆದು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು. ಯಾವುದೇ ಯೋಜನೆಯ ಅನುದಾನ ಬಳಕೆಯಾಗದೆ ಉಳಿಯದಂತೆ ಎಚ್ಚರಿಕೆ ವಹಿಸಬೇಕು.
ನಿಗದಿಪಡಿಸಿದ ಅನುದಾನವನ್ನು ಸಮರ್ಕವಾಗಿ ಹಾಗೂ ಉದ್ದೇಶಿತ ಕಾರ್ಯಗಳಿಗೆ ಬಳಸಿಕೊಂಡು ಯೋಜನೆಯ ಸಂಪೂರ್ಣ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ದೊರಕುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಇಲಾಖಾವಾರು ನಿಗದಿಪಡಿಸಿದ ಗುರಿ ಮತ್ತು ಸಾಧನೆಯ ನಡುವಿನ ಪ್ರಗತಿಯನ್ನು ನಿರಂತರವಾಗಿ ಪರೀಶೀಲಿಸಿ, ಗುರಿ ಸಾಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.