ಯುಗದಲ್ಲಿ ವೆಬ್ ಜ್ಞಾನ ಅಗತ್ಯ: ವಿಜಯಮಹಾಂತೇಶ ಬಂಗಾರಗುಂಡ

ಯುಗದಲ್ಲಿ ವೆಬ್ ಜ್ಞಾನ ಅಗತ್ಯ: ವಿಜಯಮಹಾಂತೇಶ ಬಂಗಾರಗುಂಡ  Web knowledge is essential in this era: Vijayamahantesha Bangaragunda

ಲೋಕದರ್ಶನ ವರದಿ 

ಬಾಗಲಕೋಟೆ, ಸೆ.24: ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗ ಹಾಗೂ ಸ್ವಯಂ ಉದ್ಯೋಗದ ಅವಕಾಶಗಳನ್ನು ವಿಸ್ತರಿಸಿಕೊಳ್ಳಲು ವೆಬ್ ತಂತ್ರಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಇಂಪೋಕ್ಷೇತ್ರ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಿಜಯಮಹಾಂತೇಶ ಬಂಗಾರಗುಂಡ ಹೇಳಿದರು.  

ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದಿಂದ ಆಯೋಜಿಸಿದ್ದ ನಾಲ್ಕು ದಿನಗಳ ‘ವೆಬ್ ಕ್ರಾಫ್ಟ್‌’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ವೆಬ್ ಡೆವಲಪ್ಮೆಂಟ್, ಡಿಜಿಟಲ್ ವಿನ್ಯಾಸ ಹಾಗೂ ತಾಂತ್ರಿಕ ಕೌಶಲ್ಯಗಳು ಉದ್ಯೋಗಾವಕಾಶಗಳನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜ್ಞಾನವಿದ್ದರೂ ಅದನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳದಿದ್ದರೆ ಪ್ರಯೋಜನವಿಲ್ಲ. ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡಾಗ ಸಾಮರ್ಥ್ಯ ಮತ್ತಷ್ಟು ವೃದ್ಧಿಯಾಗುತ್ತದೆ ಎಂದು ತಿಳಿಸಿದರು.  

ಪ್ರಾಚಾರ್ಯ ಎಸ್‌.ಆರ್‌. ಮೂಗನೂರಮಠ ಮಾತನಾಡಿ, ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ. ಅದಕ್ಕೆ ಸೂಕ್ತ ಪ್ರೋತ್ಸಾಹ ನೀಡಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಇಂದಿನ ದಿನಗಳಲ್ಲಿ ವೆಬ್ಸೈಟ್ಗಳು ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅವುಗಳ ನಿರ್ಮಾಣ ಹಾಗೂ ನಿರ್ವಹಣೆಯ ಕೌಶಲ್ಯ ಕಲಿಯುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದರು.  

ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ನಟರಾಜ ಇಂಗಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಸಂಯೋಜಕ ಡಾ. ಕೆ.ವಿ. ಮಠ, ಲ್ಯಾಬ್ ಇನ್ಸ್ಟ್ರಕ್ಟರ್ ಎಂ.ಎಲ್‌. ಕಂಬಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.