ಪಶ್ಚಿಮ ಪದವೀಧರ ಕ್ಷೇತ್ರ: ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆ
ಲೋಕದರ್ಶನ ವರದಿ
ಗದಗ, ಸೆ. 23: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಬುಧವಾರ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕ, ಸುಗಮ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಯಾವುದೇ ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.
ಸೆ. 29ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅ. 6ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 7ರಂದು ನಾಮಪತ್ರ ಪರೀಶೀಲನೆ ಹಾಗೂ ಅ. 9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಅ. 23ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ. 27ರಂದು ಮತಗಳ ಎಣಿಕೆ ನಡೆಯಲಿದೆ. ಅ. 31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಸೆ. 22ರಿಂದಲೇ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜಕೀಯ ಮುಖಂಡರ ಭಾವಚಿತ್ರವಿರುವ ಬಂಟಿಂಗ್, ಬ್ಯಾನರ್, ಪೋಸ್ಟರ್ ಸೇರಿದಂತೆ ಪ್ರಚಾರ ಸಾಮಗ್ರಿಗಳನ್ನು 24 ಗಂಟೆಯೊಳಗೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.