ಕಾಡುಹಂದಿ ಮಾಂಸ ವಶ; ಓರ್ವನ ಬಂಧನ, ಮತ್ತೊಬ್ಬ ಪರಾರಿ!
ಲೋಕದರ್ಶನ ವರದಿ
ಮುಂಡಗೋಡ 22: ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 35 ಕೆ.ಜಿ. ಕಾಡುಹಂದಿ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ಶನಿವಾರ ಪಟ್ಟಣದ ಗಾಂಧಿನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಬೆಂಗಳೂರಿನ ಹೆಸರಘಟ್ಟದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಗಾಂಧಿನಗರದ ಸುರೇಶ ಕೊರವರ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.
ಕಾರ್ಯಾಚರಣೆ ವೇಳೆ ಒಟ್ಟು 35 ಕೆ.ಜಿ. ಕಾಡುಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಈವೇಳೆ ಯಲ್ಲಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್ ಹಾಗೂ ಮುಂಡಗೋಡ ಎಸಿಎಫ್ ಈರೇಶ ಕಬ್ಬಿನ ಅವರ ಮಾರ್ಗದರ್ಶನದಲ್ಲಿ ಮುಂಡಗೋಡ ವಲಯ ಅರಣ್ಯಾಧಿಕಾರಿ ಅಪ್ಪಾರಾವ ಕಲಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಉಪ ವಲಯ ಅರಣ್ಯಾಧಿಕಾರಿಗಳಾದ ಅರ್ಜುನ ಮೊರಬ, ಸುನಿತಾ ಬಿ.ಎಂ., ಗಸ್ತು ಅರಣ್ಯ ಪಾಲಕರಾದ ಮುಸ್ತಾಕ್ ಅಲಿ ಒಂಟಿ, ಮುತ್ತುರಾಜ ಹಳ್ಳಿ, ಸಂತೋಷ ಜಲ್ಲೇರ, ರಾಘವೇಂದ್ರ ಅಮ್ಮಿನಬಾವಿ ಸೇರಿದಂತೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.