ಬಾಗಲಕೋಟೆ

ವನ್ಯಜೀವಿ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ: ಜೆ.ಟಿ.ಪಾಟೀಲ

ವನ್ಯಜೀವಿ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ: ಜೆ.ಟಿ.ಪಾಟೀಲ

ಬಾಗಲಕೋಟೆ 04: ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ 10 ಕಿ.ಮೀ. ಮ್ಯಾರಥಾನ್ ಹಾಗೂ 5 ಕಿ.ಮೀ. ವಾಕಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಪ್ರಮಾಣ ಕಡಿಮೆಯಾಗಿದ್ದು, ಪರಿಸರ ಸಮತೋಲನ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಅಗತ್ಯವಿದೆ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು ಎಂದರು. ತಮ್ಮ ಜಮೀನಿನಲ್ಲಿ 10 ಸಾವಿರ ಗಿಡಗಳನ್ನು ನೆಟ್ಟಿರುವುದಾಗಿ ತಿಳಿಸಿದ ಅವರು, ಚಿಕ್ಕಸಂಗಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ಒಂದು ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರಣ್ಯ ಪ್ರದೇಶ ಕಡಿಮೆಯಾಗುತ್ತಿರುವುದರಿಂದ ವನ್ಯಜೀವಿಗಳಿಗೆ ನೈಸರ್ಗಿಕ ಆವಾಸಸ್ಥಾನದ ಕೊರತೆ ಉಂಟಾಗುತ್ತಿದ್ದು, ಹಲವು ಪ್ರಾಣಿಗಳು ಅಪರೂಪವಾಗುತ್ತಿವೆ. ಹೀಗಾಗಿ ಅರಣ್ಯ ಪ್ರದೇಶವನ್ನು ಹೆಚ್ಚಿಸಿ ಸಂರಕ್ಷಿಸುವುದು ಅಗತ್ಯ ಎಂದರು. ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಜಿಲ್ಲೆಯ ಹಸಿರು ಹೊದಿಕೆ ಹೆಚ್ಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಲು ಕ್ರಮ ಕೈಗೊಳ್ಳಲಾಗುವುದು. ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ ಮಾತನಾಡಿ, ಅರಣ್ಯ, ವನ್ಯಜೀವಿ ಹಾಗೂ ಪರಿಸರ ಸಂರಕ್ಷಣೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಹೆಚ್‌.ಪೂಜಾರ ಅವರು ವಿಜೇತರಿಗೆ ಬಹುಮಾನ ವಿತರಿಸಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಆದ್ಯತೆ ನೀಡಬೇಕು. ವನ್ಯಜೀವಿ ಬೇಟೆ ಹಾಗೂ ಅರಣ್ಯ ಒತ್ತುವರಿಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣಾಡಿ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಡಳಿತ ಭವನದಿಂದ ಆರಂಭವಾದ ಮ್ಯಾರಥಾನ್ ಹಾಗೂ ವಾಕಥಾನ್ ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. . 


ಸುದ್ದಿ ಓದಿ