ಬ್ಯಾಡಗಿಯಲ್ಲಿ ಮಹಿಳಾ ವಿಚಾರಗೋಷ್ಠಿ; ಶಿಕ್ಷಣ, ಸ್ವಾವಲಂಬನೆ ಮತ್ತು ಆರೋಗ್ಯ ಜಾಗೃತಿಗೆ ಒತ್ತು
ಬ್ಯಾಡಗಿ, ಆ.5: ಕುಟುಂಬದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಹಿಳೆಯರು ಸಬಲರಾದರೆ ಕುಟುಂಬ, ಸಮಾಜ ಹಾಗೂ ದೇಶವೂ ಅಭಿವೃದ್ಧಿಯಾಗುತ್ತದೆ ಎಂದು ಧಾರವಾಡ ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ದಯಾಶೀಲಾ ಹೇಳಿದರು.
ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಲ್ಲಿ ಆತ್ಮವಿಶ್ವಾಸ, ನಾಯಕತ್ವ, ಆರೋಗ್ಯ ಅರಿವು, ಆರ್ಥಿಕ ಸ್ವಾವಲಂಬನೆ ಹಾಗೂ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳು ಆರ್ಥಿಕ ಸ್ವಾವಲಂಬನೆಗೆ ನೆರವಾಗುತ್ತಿವೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಿಕ್ಷಕಿ ರೂಪಾ ಸಜ್ಜನ ಅವರು ಮಹಿಳಾ ಶಿಕ್ಷಣ, ಸ್ವಉದ್ಯೋಗ, ಆರೋಗ್ಯ, ಡಿಜಿಟಲ್ ಸಾಕ್ಷರತೆ ಹಾಗೂ ಕಾನೂನು ಅರಿವಿನ ಮಹತ್ವವನ್ನು ವಿವರಿಸಿದರು. ಸಮಾಜದಲ್ಲಿನ ಮೂಢನಂಬಿಕೆ, ಲಿಂಗಭೇದ, ಬಾಲ್ಯವಿವಾಹ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ ಮಹಿಳೆಯರು ಜಾಗೃತರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸುರೇಖಾ ಅಕ್ಕ, ಶಿವರಾಯ ಪ್ರಭು, ಮಹದೇವ ನಾಯಕ, ಸುಧಾ ನಾಯಕ ಸೇರಿದಂತೆ ಯೋಜನೆಯ ಅಧಿಕಾರಿಗಳು, ಸಿಬ್ಬಂದಿ, ಸೇವಾ ಪ್ರತಿನಿಧಿಗಳು ಹಾಗೂ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.