ವಿಶ್ವ ದೃಷ್ಟಿ ದಿನಾಚರಣೆ: ಕಣ್ಣಿನ ತಪಾಸಣೆ ಅಗತ್ಯ
ಲೋಕದರ್ಶನ ವರದಿ
ಬೆಳಗಾವಿ 09: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಹಾಗೂ ವಿವಿಧ ಆರೋಗ್ಯ ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ 8ರಂದು ಕೆ.ಕೆ. ಕೊಪ್ಪದ ಸೋಮವ್ವಾ ಚ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 27ನೇ ವಿಶ್ವ ದೃಷ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ನಿಮ್ಮ ಕಣ್ಣುಗಳನ್ನು ಪ್ರೀತಿಸಿ ಎಂಬ ಸಂದೇಶದೊಂದಿಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ವಿಶೇಷವಾಗಿ ವಯೋವೃದ್ಧರು ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ದೃಷ್ಟಿದೋಷವನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಹಾಗೂ ಕನ್ನಡಕದ ಮೂಲಕ ದೃಷ್ಟಿ ಸುಧಾರಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ಕಣ್ಣಿನ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಗೀತಾ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿ, ದೃಷ್ಟಿದೋಷದ ಪ್ರಮುಖ ಕಾರಣಗಳು, ಆರಂಭಿಕ ಲಕ್ಷಣಗಳು ಹಾಗೂ ತಪಾಸಣೆ ಮತ್ತು ಚಿಕಿತ್ಸಾ ವಿಧಾನಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಕಣ್ಣಿನ ಪರೀಕ್ಷೆ, ವಿವಿಧ ಕಣ್ಣಿನ ಕಾಯಿಲೆಗಳ ಪತ್ತೆ, ಡಯಾಬಿಟಿಕ್ ರೆಟಿನೋಪತಿ ತಪಾಸಣೆ ಸೇರಿದಂತೆ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ. ಶಾಲಾ ಮಕ್ಕಳಲ್ಲಿ ದೃಷ್ಟಿದೋಷವನ್ನು ಆರಂಭದಲ್ಲಿಯೇ ಗುರುತಿಸಿ ಅಗತ್ಯ ಚಿಕಿತ್ಸೆ ಕಲ್ಪಿಸುವುದು ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳು ಹಾಗೂ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಿಸಲಾಯಿತು. ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕುಮಾರಿ ಸುಜಾತಾ ಗಂಜಾಗೋಳ ಅವರು ಕಣ್ಣಿನ ಆರೋಗ್ಯದ ಕುರಿತು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಧುರಾ ಡಿ. ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಣ್ಣಿನ ಆರೋಗ್ಯದ ಕುರಿತು ಅರಿವು ಮೂಡಿಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಕುಟುಂಬ ಹಾಗೂ ಸಮುದಾಯದಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಉಪ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಭರತ ಹೆಚ್. ಬಹುರೂಪಿ ಸ್ವಾಗತಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಮಾನೆ ಕಾರ್ಯಕ್ರಮ ನಿರೂಪಿಸಿದರು. ಕು. ಪೂಜಾ ಮ. ನಾಯಿಕ, ಮೀತಾ ನಾಂದೂಡಕರ, ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.