ವ್ಯಸನಮುಕ್ತ ಜೀವನಕ್ಕೆ ಯುವಕರು ಆದ್ಯತೆ ನೀಡಲಿ: ಮಲ್ಲನಗೌಡ ಬಿರಾದಾರ
ಲೋಕದರ್ಶನ ವರದಿ
ವಿಜಯಪುರ 01 : ಯುವಕರು ಯಾವುದೇ ರೀತಿಯ ವ್ಯಸನಗಳಿಗೆ ಬಲಿಯಾಗದೆ ಆರೋಗ್ಯ, ಶಿಕ್ಷಣ ಹಾಗೂ ಉತ್ತಮ ಜೀವನ ಮೌಲ್ಯಗಳಿಗೆ ಆದ್ಯತೆ ನೀಡಿ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದಾರ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಪ್ರಮುಖ ಹಂತವಾಗಿದ್ದು, ತಂಬಾಕು, ಗುಟ್ಕಾ, ಮದ್ಯಪಾನದಂತಹ ದುಶ್ಚಟಗಳಿಗೆ ಯುವಕರು ಒಳಗಾಗಬಾರದು. ಇವು ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ಕುಟುಂಬದ ನೆಮ್ಮದಿಯ ಮೇಲೂ ದುಷ್ಪರಿಣಾಮ ಬೀರುತ್ತವೆ. ಯುವಜನತೆ ಕ್ರೀಡೆ, ಯೋಗ, ವ್ಯಾಯಾಮ ಹಾಗೂ ಶಿಸ್ತಿನ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಪ್ರತಿಜ್ಞಾ ವಿಧಿ ಬೋಧಿಸಿದರು. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾದ ಯುವಕರಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು. ಮನೋವೈದ್ಯ ಡಾ. ಮಂಜುನಾಥ ಮಸಳಿ ಅವರು ವಿಶೇಷ ಉಪನ್ಯಾಸ ನೀಡಿ, ಮಾದಕ ವ್ಯಸನಗಳು ದೇಹ, ಮೆದುಳು ಹಾಗೂ ಕುಟುಂಬದ ಮೇಲೆ ಬೀರುವ ದುಷ್ಪರಿಣಾಮಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ವ್ಯಸನ ಆರಂಭವಾಗುವುದನ್ನೇ ತಡೆಯುವುದು ಅದರಿಂದ ಮುಕ್ತರಾಗುವ ಉತ್ತಮ ಮಾರ್ಗ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.